ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸದ್ಯದಲ್ಲೇ ಶಿಫ್ಟ್ ಮಾಡಲಾಗುತ್ತದೆ ಎಂಬ ವಿಷಯವೊಂದು ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆಯ ಮೇರೆಗೆ ದರ್ಶನ್ ಮತ್ತು ಸಹಚರರನ್ನು ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡಲು ಸಿದ್ಧತೆ ನಡೆಯುತ್ತಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಇರುವ ಫೋಟೋವೊಂದು ಭಾನುವಾರ ವೈರಲ್ ಆಗಿತ್ತು. ಈ ಫೋಟೋದಲ್ಲಿ ದರ್ಶನ್ ಒಂದು ಕೈಯಲ್ಲಿ ಸಿಗರೇಟ್ ಹಿಡಿದು, ಮತ್ತೊಂದು ಕೈಯಲ್ಲಿ ಟೀ ಕಪ್ ಹಿಡಿದು, ಚೇರ್ ಮೇಲೆ ಕುಖ್ಯಾತ ರೌಡಿಶೀಟರ್‍ಗಳಾದ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ದರ್ಶನ್ ಅವರ ಮ್ಯಾನೇಜರ್ ಆಗಿರುವ ನಾಗರಾಜ್ ಹರಟೆ ಹೊಡೆಯುತ್ತಿರುವ ಫೋಟೋ ಬಹಿರಂಗವಾಗಿದೆ. ಇದರ ಜೊತೆಗೆ ಜೈಲಿನಿಂದಲೇ ದರ್ಶನ್ ವೀಡಿಯೋ ಕಾಲ್ ಮೂಲಕ ಮಾತನಾಡುವ ವೀಡಿಯೋ ಸಹ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈ ಸಂಬಂಧ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಬೆಳಿಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡುವ ವೇಳೆ ಹೇಳಿದ್ದರು. ಅದರ ಜೊತೆಗೆ ಜೈಲಿನಿಂದ ವೀಡಿಯೋ ಕರೆ ಮಾಡಿ ಮತ್ತೊಬ್ಬ ವ್ಯಕ್ತಿಯ ಜೊತೆಗೆ ಮಾತನಾಡಿರುವ ಸಂಬಂಧ ದರ್ಶನ್ ವಿರುದ್ಧ ಪ್ರತ್ಯೇಕ ಎಫ್.ಐ.ಆರ್ ದಾಖಲಾಗುವ ಸಾಧ್ಯತೆ ಇದೆ.

ಇನ್ನು, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ರಾಜ್ಯದ ಬೇರೊಂದು ಕಾರಾಗೃಹಕ್ಕೆ ಶಿಫ್ಟ್ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆನ್ನಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಸಹ ಹಾಕಲಾಗಿದೆ.
‘ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ. ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ…
— Siddaramaiah (@siddaramaiah) August 26, 2024


